ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಭಾಗದಲ್ಲಿ ಹೆಚ್ಚುತ್ತಿರುವ ಕಡಲಕೊರೆತವನ್ನು ತಕ್ಷಣಕ್ಕೆ ತಡೆಯುವ ನಿಟ್ಟಿನಲ್ಲಿ ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು ಅಲ್ಲದೇ ಕಡಲಕೊರೆತ ಶಾಶ್ವತ ತಡೆ ಯೋಜನೆಯನ್ನು ಕೂಡ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.

ಅವರು ಬುಧವಾರ ಮರವಂತೆಯ ಕಡಲಕೊರೆತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ಹಿಂದೆ ಕಡಲಕೊರೆತ ತಡೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಸಮರ್ಪಕವಾಗಿ ಕಲ್ಲುಗಳನ್ನು ಹಾಕದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಎಲ್ಲಾ ಭಾಗದಲ್ಲಿಯೂ ಪರಿಶೀಲನೆ ನಡೆಸಿ ಕಳಪೆ ಕಾಮಗಾರಿ ಆಗಿರುವಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆಸಲು ಸಂಪೂರ್ಣ ಕಡಲತೀರದ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮರವಂತೆ ಬಂದರು ಮುಂದುವರಿದ ಕಾಮಗಾರಿಗೆ 84 ಕೋಟಿ ರೂ. ಘೋಷಿಸಲಾಗಿದ್ದು, ಅದನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನೆರೆಹಾವಳಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲು ಸರಕಾರ ಘೋಷಿಸಿದೆ ಎಂದರು.

ಮರವಂತೆ ಭಾಗದಲ್ಲಿ ಕಡಲಕೊರೆತದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಸ್ಥಳೀಯರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ಈ ಸಂದರ್ಭ ಕಂದಾಯ ಸಚಿವ ಆರ್. ಅಶೋಕ್, ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.
ತುರ್ತು 500 ಕೋಟಿ ಬಿಡುಗಡೆ:
ಇದಕ್ಕೂ ಪೂರ್ವದಲ್ಲಿ ಅವರು ಉಡುಪಿಯಲ್ಲಿ ಮಳೆ ಹಾಗೂ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪುನಃ ಆಗಸ್ಟ್ ನಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು. ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿಗಳು, ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ದರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು ಒಂದು ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಅದೇ ರೀತಿ ಈ ವರ್ಷವೂ ಕೂಡಲೇ ಹಣ ಬಿಡುಗಡೆ ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.


















