ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಯಗಳ ಸಹಕಾರದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇಂದಿನಿಂದ ಅ.17ರವರೆಗೆ ಹಮ್ಮಿಕೊಂಡಿರುವ ಇಂದ್ರಧನುಷ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್‌ಹೌಸ್ ಬಳಿಯ ಶ್ರೀರಾಮ ಅಂಗನವಾಡಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ, ಮಿಷನ್ ಇಂದ್ರಧನುಷ್ ಕಾರ್ಯಕ್ರಮದಡಿಯಲ್ಲಿ ನಮ್ಮ ಜಿಲ್ಲೆಯಲ್ಲಿ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮ ಪ್ರಗತಿ ಉತ್ತಮಪಡಿಸಲು ಇಂದಿನಿಂದ ಅ.17ರವರೆಗೆ ಗುರುವಾರ ಹೊರತುಪಡಿಸಿ೭ ಕರ್ತವ್ಯದ ದಿನಗಳಲ್ಲಿ ಲಸಿಕೆ ವಂಚಿತ, ಲಸಿಕೆ ಪ್ರಾರಂಭಿಸದ, ಲಸಿಕೆ ಪಡೆಯಲು ಅರ್ಹ 0-2 ವರ್ಷದೊಳಗಿನ ಮಕ್ಕಳು ಹಾಗೂ ಟಿ.ಟಿ. ಚುಚ್ಚುಮದ್ದು ಪಡೆಯಲು ಅರ್ಹ ಗರ್ಭಿಯಣಿಯರಿಗೆ ಲಸಿಕೆ ನೀಡಲು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿವಿಧೆಡೆ ಲಸಿಕಾ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಅರ್ಹರಾದ ಎಲ್ಲರೂ ಲಸಿಕೆ ಹಾಕಿಸಿಕೊಂಡು ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿಯರಾದ ಅರ್ಪಿತಾ, ಪ್ರಜ್ವಲಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಕಲ್ಪನಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.