ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೆಟ್ಟಿ ಕುಸಿತ ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಗೆ ವಹಿಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಿದೆ. ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.ಅಂಗಾರ ಸ್ಪಷ್ಟಪಡಿಸಿದರು.
ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು ಜೆಟ್ಟಿ ಕುಸಿತ ಪ್ರದೇಶವನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಜೆಟ್ಟಿ ಕುಸಿತವನ್ನು ಲೋಕಾಯುಕ್ತ ತನಿಖೆ ನಡೆಸಬೇಕೆಂಬ ಸ್ಥಳೀಯ ಮೀನುಗಾರರ ಬೇಡಿಕೆ ಇದೆ. ಈ ಬಗ್ಗೆ ಸಭೆ ನಡೆಸಿ ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಕಾಮಗಾರಿ ಗುಣಮಟ್ಟದ ಬಗ್ಗೆ ಗುತ್ತಿಗೆದಾರರು ಗಮನಹರಿಸಬೇಕಿದ್ದು, ಕಳಪೆ ಕಾಮಗಾರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಬಿಲ್ಲು ಮಾಡಲಾಗಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಪಡೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಗಂಗೊಳ್ಳಿ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲ ಹೊತ್ತು ಮೀನುಗಾರ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಚಿವ ಅಂಗಾರ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು. ಈ ಬಗ್ಗೆ ಮಾತನಾಡಿದ ಮೀನುಗಾರ ಮುಖಂಡರಾದ ರಮೇಶ್ ಕುಂದರ್ ಹಾಗೂ ರಾಮಪ್ಪ ಖಾರ್ವಿ, ಕಳಪೆ ಕಾಮಗಾರಿಯಿಂದಾಗಿ ಮೀನುಗಾರರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇಲ್ಲಿ ಅಪೂರ್ಣ, ಅಸಮರ್ಪಕ ಕಾಮಗಾರಿಯಿಂದಾಗಿ ನಾವು ಭಟ್ಕಳ, ತದಡಿ, ಮಲ್ಪೆಯಲ್ಲಿ ಬೋಟ್ ನಿಲ್ಲಿಸಿ, ಬರಬೇಕಾದ ಅನಿವಾರ್ಯತೆಯಿದೆ. ಎಂಜಿನಿಯರ್ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಈ ಅವಘಢ ಉಂಟಾಗಿದ್ದು, ಇವರು ಮೀನುಗಾರರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಇಲ್ಲಿ ಆಗಿರುವುದು 370 ಮೀ. ಪೈಕಿ ಸುಮಾರು 100 ಮೀ. ಅಷ್ಟೆ. ಆದರೆ 200 ಮೀ. ಆಗಿದೆಯೆಂದು ಹೇಳುತ್ತಿದ್ದಾರೆ. ಅರ್ಧದಷ್ಟು ಸಹ ಕಾಮಗಾರಿ ಆಗದೇ, ಅದೇಗೆ 10 ಕೋ.ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಶ್ನಿಸಿದ ಅವರು, ಡಿಸೆಂಬರ್ ಒಳಗಾಗಿ ಸಂಪೂರ್ಣ ಕಾಮಗಾರಿ ಮುಗಿಸುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಇಂಜಿನಿಯರ್ ಶ್ರೀನಿವಾಸ ಮೂರ್ತಿ, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಪಿ.ನಾಗರಾಜ್, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಗಣೇಶ, ಉದಯಕುಮಾರ್, ಸುಮಲತಾ, ದಿವಾಕರ ಖಾರ್ವಿ, ಉಪನಿರ್ದೇಶಕ ಕುಮಾರಸ್ವಾಮಿ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಮೀನುಗಾರ ಸಂಘಟನೆಗಳ ಮುಖಂಡರು, ಮೀನುಗಾರರು ಉಪಸ್ಥಿತರಿದ್ದರು.
ಇದನ್ನೂ ಓದಿ:
► ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ: ಕಳಪೆ ಕಾಮಗಾರಿ ಆರೋಪ – https://kundapraa.com/?p=62391 .