ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಮತ್ತು ಛಲ ಇರಬೇಕು. ನಿದ್ರೆ ಬಿಟ್ಟು ಕನಸು ಕಂಡರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಕೇವಲ ವಿದ್ಯೆ ಇದ್ದರೆ ಮಾತ್ರ ಸಾಲದು. ಸಾಧನೆಗೆ ಪರಿಶ್ರಮ ಮುಖ್ಯ. ಇಂದಿನ ದಿನಗಳಲ್ಲಿ ವಿದ್ಯೆಗೆ ಹೆಚ್ಚಿನ ಮಹತ್ವ, ಪ್ರಾಶಸ್ತ್ಯ ನೀಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಕಳೆದ ೫೦ ವರ್ಷಗಳಿಂದ ಉತ್ತಮ ಚಟುವಟಿಕೆ ಮೂಲಕ ಶಾಲೆಯ ಅಭಿವೃದ್ಧಿಗೆ ದುಡಿಯುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಪ್ರಶಂಸನೀಯ ಎಂದು ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಶಾಂತೇರಿ ಬಾ ರಂಗ ಮಂಟಪದಲ್ಲಿ ಭಾನುವಾರ ಜರಗಿದ ಗಂಗೊಳ್ಳಿಯ ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಶುಭಾಶಂಸನೆಗೈದರು. ಇದೇ ಸಂದರ್ಭ ಎಸ್.ವಿ. ಶಾಲೆಗಳ ನಿವೃತ್ತಿ ಹೊಂದಿದ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳನ್ನು, ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರನ್ನು, ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಸಂಘದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು. ಚೀಫ್ ಇನ್ಸುರೆನ್ಸ್ ಎಡ್ವೈಸರ್ ಸುಧೀರ್ ಪೂಜಾರಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು ಸ್ವಾಗತಿಸಿದರು. ಜಿ.ಸುದನೇಶ ಶ್ಯಾನುಭಾಗ್ ವರದಿ ವಾಚಿಸಿದರು. ಮಹಮ್ಮದ್ ಹುಸೇನ್ ಸಂದೇಶ ವಾಚಿಸಿದರು. ರಾಮನಾಥ ಚಿತ್ತಾಲ್ ಅತಿಥಿಗಳನ್ನು ಪರಿಚಯಿಸಿದರು. ಶೇಖರ್ ಜಿ. ಮತ್ತು ಬಿ.ಲಕ್ಷ್ಮೀಕಾಂತ ಮಡಿವಾಳ ಸನ್ಮಾನಿತರನ್ನು ಪರಿಚಯಿಸಿದರು. ನಾಗರಾಜ ಕಲೈಕಾರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಭಾಸ್ಕರ ಎಚ್.ಜಿ. ವಂದಿಸಿದರು.