ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರದ ಬಡವರು, ಅಶಕ್ತರಿಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಇದರ ಪ್ರಯೋಜನ ದೊರೆಯುವಂತೆ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಕಂದಾಯ ಇಲಾಖೆ ಶ್ರಮಿಸುತ್ತಿದೆ ಎಂದು ಬೈಂದೂರು ತಹಶಿಲ್ದಾರರಾದ ಶ್ರೀಕಾಂತ್ ಎಸ್. ಹೆಗ್ಡೆ ಹೇಳಿದರು.
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನಾವುಂದ, ಮರವಂತೆ ಶಾಖೆ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಆಶ್ರಯದಲ್ಲಿ ಶನಿವಾರ ಮರವಂತೆ ಶಾಖಾ ವಠಾರದಲ್ಲಿ ಆಯೋಜಿಸಲಾದ ಗ್ರಾಹಕರ ಸಭೆ, ಕಂದಾಯ ಇಲಾಖೆ ಮಾಹಿತಿ ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸಾರ್ವಜನಿಕರು ಸಾಧ್ಯವಾದಷ್ಟು ನೇರವಾಗಿ ಕಛೇರಿಗೆ ಬಂದರೆ ಅಗತ್ಯ ಸೌಲಭ್ಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮಖರಾಗಿದ್ದೇವೆ ಎಂದರು.
ಹಿರಿಯ ಪತ್ರಕರ್ತರಾದ ಎಸ್. ಜನಾರ್ದನ ಮರವಂತೆ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಎಂ. ವಿನಾಯಕ ರಾವ್, ಭೋಜ ನಾಯ್ಕ್, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಗಾಣಿಗ ಇದ್ದರು.
ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಸೇರಿದಂತೆ ಎಲ್ಲಾ ಶಾಖೆಗಳು ಸ್ವಂತ ಕಟ್ಟಡ ಹೊಂದಿ, ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಗಾಗ್ಗೆ ವಿವಿಧ ಇಲಾಖೆಗಳಿಂದ ಜನರಿಗೆ ಮಾಹಿತಿ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಸ್ವಸಹಾಯ ಸಂಘದ ಮಹಿಳಾ ಮತ್ತು ಪುರುಷ ಗುಂಪುಗಳಿಗೆ ಸಮವಸ್ತ್ರ ವಿತರಿಸಲಾಯಿತು. ಅದೃಷ್ಟಶಾಲಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.
ಸಿಇಓ ಸುರೇಶ್ ಅಳ್ವೆಗದ್ದೆ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.























