ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ದೇಶದ ಅಸಂಖ್ಯಾಕ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೌಚಾಲಯ, ವಿದ್ಯುತ್, ರೈತರಿಗೆ ನೆರವು ಹೀಗೆ ಎಲ್ಲ ವರ್ಗದ ಜನರ ಪ್ರಗತಿಗೂ ನೆರವಾಗಿದ್ದಾರೆ. ನಮ್ಮ ದೇಶ ಸ್ವಾಭಿಮಾನಿ ಶಕ್ತಿಶಾಲಿ ರಾಷ್ಟ್ರವಾಗಿ ಬೆಳೆಯುತ್ತಿದ್ದು, ೨೦೪೭ರಲ್ಲಿ ನಮ್ಮ ದೇಶವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ಸಮೃದ್ಧ, ಶಕ್ತಿಶಾಲಿ, ಸ್ವಾಭಿಮಾನಿ ಭಾರತ ಮಾಡುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರಕಾರ ಬಡ ಜನರ ಅಭಿವೃದ್ಧಿ, ಸ್ವಾವಲಂಬನೆಗೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ತಿಳಿಯಬೇಕು ಎನ್ನುವ ದೃಷ್ಟಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸುತ್ತಿದೆ. ದುಡಿಯುವ ಕೈಗಳಿಗೆ ಬಲ ನೀಡಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರಕಾರ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯ ಸೌಲಭ್ಯವನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ನೋಡೆಲ್ ಅಧಿಕಾರಿ, ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖಾ ವ್ಯವಸ್ಥಾಪಕ ದೀಪಕ್ ಕುಮಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಉಡುಪಿ ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಕೇಂದ್ರದ ಮೀರಾ, ಉಡುಪಿ ಜಿಲ್ಲಾ ಆಸ್ಪತ್ರೆಯ ಆರೋಗ್ಯ ಮಿತ್ರ ಸುಜನ್ಮಾಲಾ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಸಚಿನ್, ಕೃಷಿ ಇಲಾಖೆಯ ಗಜೇಂದ್ರ, ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ಸಂತೋಷ ಶೆಟ್ಟಿ, ಗಂಗೊಳ್ಳಿ ಅಂಚೆ ಅಧೀಕ್ಷಕ ಉದಯ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಾತ್ವಿಕ್ ಹೆಗ್ಡೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮಾಶಂಕರ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಪಂ ಸದಸ್ಯ ಬಿ.ಲಕ್ಷ್ಮೀಕಾಂತ ಮಡಿವಾಳ ಪ್ರತಿಜ್ಞಾ ವಿಧಿ ಬೋಧಿಸಿದರು. ದಿನದರ್ಶಿಕೆ ಮತ್ತು ಮಾಹಿತಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಗಂಗೊಳ್ಳಿ ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.















