ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸರ್ಕಾರದ ಪ್ರಸಕ್ತ ಸಾಲಿಗೆ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕ್ರಿಯಾಯೋಜನೆಗಳ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ ರೇಜು ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಳೆ, ಗಾಳಿ, ಸಿಡಿಲು ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಿಂದ ಜೀವಹಾನಿ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಬೇಕು. ವಿಕೋಪ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.
ಮಳೆಗಾಲದಲ್ಲಿ ನೀರು ಹರಿಯುವ ಚರಂಡಿ ಹಾಗೂ ತೋಡುಗಳಲ್ಲಿ ಕಸದರಾಶಿಗಳು ತುಂಬಿ ಮಳೆಯ ನೀರು ಹರಿಯದೇ ಕೃತಕ ನೆರೆ ಉಂಟಾಗುವ ಸಾಧ್ಯತೆ ಇರುತ್ತದೆ. ಅಲ್ಲದೇ ಕುಡಿಯುವ ನೀರಿನ ಸಂಪರ್ಕಗಳಲ್ಲಿಯೂ ಸಹ ಮಿಶ್ರಣವಾಗಿ ಆರೋಗ್ಯ ಸಮಸ್ಯೆಗಳು ಉಂಟಾಗಬಹುದಾಗಿದ್ದು, ಇದನ್ನು ತಡೆಯಲು ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ಅಗತ್ಯವಿರುವ ಕೆಲಸ ಕಾರ್ಯಗಳನ್ನು ಕೂಡಲೇ ಕೈಗೊಳ್ಳಬೇಕು ಎಂದ ಅವರು ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ನಂತರ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ತಡೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಇವುಗಳ ಚಿಕಿತ್ಸೆಗೆ ಬೇಕಾಗುವ ಔಷಧ, ಚುಚ್ಚುಮದ್ದು ಇತ್ಯಾದಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ಇಟ್ಟುಕೊಳ್ಳಬೇಕು. ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳು ಉತ್ಪತ್ತಿ, ಹರಡುವಿಕೆ, ಅವುಗಳ ಲಕ್ಷಣ, ಚಿಕಿತ್ಸೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ನೀಡಬೇಕು ಎಂದರು.
ಮಳೆಗಾಲದಲ್ಲಿ ಜೋರು ಗಾಳಿಗೆ ಮರಗಳು ರಸ್ತೆಯ ಮೇಲೆ ಉರುಳಿ ಬಿದ್ದು, ಅವಘಡಗಳು ಉಂಟಾಗುತ್ತವೆ. ರಸ್ತೆ ಬದಿಯ ಅಪಾಯಕಾರಿ ಆಗಿರುವಂತಹ ಮರಗಳನ್ನು ಇತರೆ ಇಲಾಖೆಗಳ ಸಹಯೋಗದೊಂದಿಗೆ ಗುರುತಿಸಿ, ಅವುಗಳ ತೆರವುಗೊಳಿಸುವ ಕಾರ್ಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕು. ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೂಡಲೇ ಕೈಗೊಳ್ಳುವುದರೊಂದಿಗೆ ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಏಪ್ರಿಲ್ ನಿಂದ ಈವರೆಗೆ 876 ವಿದ್ಯುತ್ ಕಂಬಗಳು ಗಾಳಿ ಮಳೆಗೆ ಉರುಳಿ ಬಿದ್ದಿವೆ. ಇವುಗಳ ಪ್ರಮಾಣ ಹೆಚ್ಚು ಇದೆ. ಇಷ್ಟೊಂದು ಪ್ರಮಾಣದಲ್ಲಿ ಹಾನಿ ಉಂಟಾಗಲು ಕಾರಣವನ್ನು ಕಂಡುಕೊಳ್ಳಬೇಕು. ಒಂದೊಮ್ಮೆ ಗುಣಮಟ್ಟದ ಕೊರತೆಯಿಂದ ಆಗಿರುವ ಬಗ್ಗೆ ಪರಿಶೀಲಿಸಬೇಕು ಎಂದ ಅವರು, ಮಳೆ-ಗಾಳಿಯಿಂದಾಗಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡರೆ ತಕ್ಷಣವೇ ಪುನರ್ ಸಂಪರ್ಕ ಕಲ್ಪಿಸುವ , ನಿರ್ವಹಣೆ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲೆಗಳು ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು, ಸಮವಸ್ತ್ರಗಳು ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ಶಾಲಾ ಕಟ್ಟಡಗಳು ದುರಸ್ಥಿ ಕೈಗೊಳ್ಳುವುದು ಅಗತ್ಯವಿದ್ದಲ್ಲಿ ತಕ್ಷಣದಲ್ಲಿಯೇ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದ್ದಕ್ಕೆ ಅಭಿನಂದನೆ ತಿಳಿಸಿದರು.
ಜಿಲ್ಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಿಂಡಿ ಆಣೆಕಟ್ಟುಗಳಿಗೆ ಅಳವಡಿಸಿರುವ ಹಲಗೆಗಳನ್ನು ತೆರುವುಗೊಳಿಸುವ ಕಾರ್ಯ ಈ ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ ನೀರು ನಿಂತು ರಸ್ತೆ ಅಪಘಾತಕ್ಕೆ ಕಾರಣವಾಗುತ್ತವೆ. ಹೀಗಾಗದಂತೆ ಅವಶ್ಯವಿರುವ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದ ಅವರು, ರಸ್ತೆ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕೆಂದರು.
ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿಯೇ ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಬೇಕು. ವರಾಹಿ ಡ್ಯಾಂನಿAದ ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಕಾಮಗಾರಿಯನ್ನು ಸಹ ತ್ವರಿತವಾಗಿ ಕೈಗೊಂಡು ಪೂರ್ಣಗೊಳಿಸಲು ಸೂಚನೆ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಕಳೆದ ಏಪ್ರಿಲ್, ಮೇ ಮಾಸಗಳಲ್ಲಿ ಅಕ್ಕಿ ವಿತರಣೆ ಮಾಡಿರುವ ಬಗ್ಗೆ ಹಾಗೂ ಫಲಾನುಭವಿಗಳ ಖಾತೆಗೆ ಹಣ ವಿತರಣೆ ಆಗದಿರುವ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಡಿ.ಬಿ.ಟಿ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು. ಯುವನಿಧಿ ಯೋಜನೆಯಡಿ ಪದವೀಧರರಿಗೆ ಸ್ಟೆಂಫಂಡ್ ನೀಡುತ್ತಿರುವ ಬಗ್ಗೆ ಹಾಗೂ ಹೊಸ ನೋಂದಣಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.
ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆಯಲ್ಲಿ ನೀಡುತ್ತಿರುವ ಆಹಾರ ಪದಾರ್ಥಗಳ ವಿವರಣೆ ಹಾಗೂ ಅವುಗಳ ಸೇವನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸ್ಥಳೀಯವಾಗಿ ಹೆಸರುಕಾಳು ಹಾಗೂ ಚಿಕ್ಕಿಯ ಬಗ್ಗೆ ಹೆಚ್ಚು ಬೇಡಿಕೆ ಇದೆ. ಮುಂದಿನ ದಿನಗಳನ್ನು ಇವುಗಳನ್ನು ಒದಗಿಸುವ ಬಗ್ಗೆ ಮುಂದಾಗಬೇಕು ಎಂದರು.
ಜಿಲ್ಲೆಯಲ್ಲಿರುವ ತೋಟಗಾರಿಕೆ ಇಲಾಖೆಯ ಜಮೀನುಗಳು ಪಾಳು ಬಿದ್ದಿವೆ. ಅವುಗಳ ನಿರ್ವಹಣೆ ಮಾಡಲು ಸ್ಥಳೀಯವಾಗಿರುವ ಮಹಿಳಾ ಸಂಘಗಳ ಅಥವಾ ಸಂಜೀವಿನಿ ಸಂಘಗಳಿಗೆ ನಿರ್ವಹಣೆ ಮಾಡಿ, ಸೂಕ್ತ ಬೆಳೆಗಳನ್ನು ಬೆಳೆಯಲು ಅವಕಾಶ ಮಾಡಿಕೊಡಬೇಕೆಂದು ಸಲಹೆ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅವುಗಳ ಪ್ರಾರಂಭಕ್ಕೆ ಅಗತ್ಯವಿರುವ ಕಟ್ಟಡ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಪೂರ್ವ ತಯಾರಿ ಮಾಡಿಕೊಂಡು ಪ್ರಸಕ್ತ ಸಾಲಿನ ಆರಂಭದಿಂದಲೇ ಚಾಲ್ತಿ ಆಗುವಂತೆ ನಿಗಾವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ, ಪ್ರಕೃತಿ ವಿಕೋಪ ನಿರ್ವಹಣೆಗೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು, ಮುಂಗಾರು ಹಂಗಾಮಿಗೆ ರಸಗೊಬ್ಬರ ದಾಸ್ತಾನು, ಬಿತ್ತನೆ ಬೀಜ ರೈತರಿಗೆ ಸರಬರಾಜು ಮಾಡಲು ಕೈಗೊಂಡಿರುವ ಕ್ರಮಗಳು ಸೇರಿದಂತೆ ಮತ್ತಿತರ ವಿವರಗಳನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಹಾಯಕ ಕಮೀಷನರ್ ರಶ್ಮಿ, ವನ್ಯಜೀವಿ ವಿಭಾಗದ ಡಿಎಫ್‌ಓ ಶಿವರಾಮ ಎಂ ಬಾಬು, ಡಿಎಫ್‌ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ.ಓ ಹಾಗೂ ಮತ್ತಿತರರು ಉಪಸ್ಥಿತರಿದ್ದರು.