ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ ಹೇಳಿದರು.
ಅವರು ಇಂದು ನಗರದ ಮಿಷನ್ ಕಂಪೌಂಡ್ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಸಹ ಮಾಡಲಾಗಿದೆ. ಸರಕಾರವು ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ. ಇವುಗಳನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. 14 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದ್ದು, ಒಂದು ವೇಳೆ ನೇಮಿಸಿಕೊಂಡಲ್ಲಿ ಕಾನೂನಿನ ಅನ್ವಯ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇಡೀ ಸಮುದಾಯಕ್ಕೆ ಮನವರಿಕೆ ಮಾಡಿದಾಗ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಯಾವುದೇ ಮಕ್ಕಳು ಅವರ ಬಾಲ್ಯದ ಜೀವನದಿಂದ ವಂಚಿತರಾಗಬಾರದು. ಅವರ ಭೌತಿಕ ಬೆಳವಣಿಕೆ ಪೂರಕವಾಗುವಂತಹ ವಾತಾವರಣವನ್ನು ಕಲ್ಪಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರ ಮೂಲಕ ಅವರನ್ನು ಸುಶಿಕ್ಷಿತರನ್ನಾಗಿ ಮಾಡಬೇಕು. ಸುತ್ತಮುತ್ತಲಿನ ಪರಿಸರದಲ್ಲಿ ಬಾಲಕಾರ್ಮಿಕರಾಗಿ ಮಕ್ಕಳು ಕಾರ್ಯನಿರ್ವಹಿಸುತ್ತಿದ್ದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.
ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶವು ಸಾಕಷ್ಟು ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಸಹ ಕೃಷಿ, ಹೋಟೆಲ್, ಕಾರ್ಖಾನೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳನ್ನು ಬಾಲ ಕಾರ್ಮಿಕರಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಬಾಲ ಕಾರ್ಮಿಕ ಪದ್ಧತಿ ಪಿಡುಗನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆ ಮೂಲಕ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಅನೇಕ ಕ್ರಿಯಾ ಯೋಜನೆಗಳನ್ನು ರೂಪಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
14 ವರ್ಷದ ಕೆಳಗಿನ ಮಕ್ಕಳನ್ನು ಯಾವದೇ ಕ್ಷೇತ್ರದಲ್ಲಿಯೂ ದುಡಿಸಲು ನಿಷೇಧವಿದ್ದು, ಈ ಆದೇಶವನ್ನು ಉಲ್ಲಂಘಿಸಿ, ಮಕ್ಕಳನ್ನು ನೇಮಿಸಿಕೊಂಡಲ್ಲಿ ಅವರುಗಳ ವಿರುದ್ಧ 6 ತಿಂಗಳಿನಿಂದ 2 ವರ್ಷ ದವರೆಗೆ ಜೈಲು ಶಿಕ್ಷೆ ಅಥವಾ 20,000 ರಿಂದ 50,000 ಗಳ ವರೆಗೆ ದಂಡ ಈ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಭು ವಿ ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಖಜಾನೆ ಇಲಾಖೆಯ ಉಪನಿರ್ದೇಶಕ ಗೋಪಾಲಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಫುರ್ಟಡೋ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ವಿವಿಧ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಸ್ವಾಗತಿಸಿದರು, ಪ್ರಕಾಶ್ ಕೆ ಉಡುಪಿ ನಿರೂಪಿಸಿದರೆ, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಶಿವಪ್ರಸಾದ್ ಎನ್.ಎಸ್ ವಂದಿಸಿದರು.