ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು, ಸೋತವರು ಕುಗ್ಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆಲ್ಲಲು ಪ್ರಯತ್ನ ನಡೆಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನುಉದ್ಘಾಟಿಸಿ ಮಾತನಾಡಿದರು.
ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಾಲೆಯ ಶಿಕ್ಷಕ – ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ ಮತ್ತು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶುಭ ಹಾರೈಸಿದರು. ಪತ್ರಕರ್ತ ಬಿ. ರಾಘವೇಂದ್ರ ಪೈ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ, ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್, ದೀಕ್ಷಿತ್ ಮೇಸ್ತ, ಲಾವಣ್ಯ ಉಪಸ್ಥಿತರಿದ್ದರು.
ಸಹಶಿಕ್ಷಕಿಯರಾದ ರೇಷ್ಮಾ ನಾಯಕ್ ಸ್ವಾಗತಿಸಿದರು. ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು. ಜಯಶ್ರೀ ನಾಯಕ್ ವಂದಿಸಿದರು.