ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. ಇಂದಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಕಾಯಿಲೆರಹಿತವಾಗಿ ಆರೋಗ್ಯವಂತರಾಗಿ ಬದುಕಲು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ದೇಹದ ರೋಗ ನಿರೋಧಕರ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಮ್ಮ ಸುತ್ತಮುತ್ತಲು ದೊರೆಯುವ ಔಷಧಿ ಸಸ್ಯಗಳನ್ನು ಆಹಾರ ರೂಪದಲ್ಲಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಮನೆ ಮದ್ದಾಗಿ ಉಪಯೋಗಿಸಬಹುದು ಎಂದು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಹೇಳಿದರು.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಇದರ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಅವರು ಆರೋಗ್ಯ ಮಾಹಿತಿ ನೀಡಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕದ ಅಧ್ಯಕ್ಷ ಚಿಕ್ಕ ಮೊಗವೀರ, ಸಾರ್ವಜನಿಕ ಶ್ರೀ ಶಾರದೋತ್ಸವ ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಉಮನಾಥ ದೇವಾಡಿಗ, ಕಾರ್ಯದರ್ಶಿ ಸುಜಾತ ಬಾಬು ಖಾರ್ವಿ ಉಪಸ್ಥಿತರಿದ್ದರು. ಸತೀಶ್ ಜಿ. ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು.