ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಿರಿಮಂಜೇಶ್ವರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಗುರುವಾರದಂದು ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಅವರು ಮಾತನಾಡಿ, ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ಅವಶ್ಯಕತೆ ಇದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನಿಡೋಣ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ, ‘ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಈ ಪ್ರತಿಭಾ ಕಾರಂಜಿ ಉತ್ತಮ ಕಾರ್ಯಕ್ರಮ, ನಿಷ್ಪಕ್ಷಪಾತವಾಗಿ ತೀರ್ಪು ನೀಡುವಂತೆ ಕೋರಿಕೊಂಡು ಸೋಲು ಗೆಲುವು ಇವೆರಡನ್ನು ಸಮಾನಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ ಅವರು ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆಗೆ ಶುಭ ಹಾರೈಸಿ ಪ್ರಶಂಶಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿ ನೋಡಲ್ ಮತ್ತು ಇಸಿಒ ಸತ್ಯನಾ ಕೊಡೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರಾದ ವಿಶ್ವನಾಥ ಪೂಜಾರಿ, ಕಿರಿಮಂಜೇಶ್ವರದ ಸಮೂಹ ಸಂಪನ್ಮೂಲ ವ್ಯಕ್ತಿ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ 14 ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ, ಸಹ-ಶಿಕ್ಷಕ ಸುಬ್ರಹ್ಮಣ್ಯ ವಂದಿಸಿ, ಸಹ-ಶಿಕ್ಷಕಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.