ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.
ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ದುರ್ಬಲರಾದ ಮಕ್ಕಳ ರಕ್ಷಣೆಗೆ ಸರ್ಕಾರ ಅನೇಕ ಕಾಯಿದೆಗಳು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವುಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳ ಸರ್ವಂಗೀಣಾ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳ ಆವರಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಟ್ರಾನ್ಸ್ಫಾರ್ಮ್, ವಿದ್ಯುತ್ ತಂತಿಗಳು ಹಾದು ಹೋಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಬೇಕು ಎಂದರು.
ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿರುವ ವಾಹನ ಚಾಲಕರ ವರದಿಯನ್ನು ನೀಡುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿ ಪ್ರತಿಶತಃ ನೂರರಷ್ಟು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದರು.
ವಯಸ್ಕರಾಗದ ಅನೇಕ ಹೆಣ್ಣು ಮಕ್ಕಳು ಗರ್ಭಿಣೀಯರಾಗಿರುತ್ತಿರುವ ಕುರಿತು ಪ್ರಕರಣ ವರದಿ ಪ್ರಕಟವಾಗುತ್ತಿವೆ. ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಈ ಸಮಸ್ಯೆ ತೊಲಗಿಸಲು ಪ್ರಯತ್ನಿಸಬೇಕು. ಪ್ರಕರಣ ಗಮನಕ್ಕೆ ಬಂದ ತಕ್ಷಣ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸದಸ್ಯರು ಸೂಚಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಶಿಕ್ಷಣ ಕಾರ್ಯಪಡೆಯನ್ನು ರಚಿಸಬೇಕು ಶಾಲೆಗಳಲ್ಲಿ ತೆರೆದಮನೆ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಇದರಿಂದ ಫೋಕ್ಸೋ ಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದು ಎಂದ ಅವರು, ಮಕ್ಕಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ನೋಂದಣಿ ಪುಸ್ತಕವನ್ನು ನಿರ್ವಹಣೆ ಮಾಡಬೇಕು ಎಂದರು.
5 ಕಿ.ಮೀ ದೂರದಿಂದ ಶಾಲೆಗೆ ಬರುವ ಮಕ್ಕಳಿಗೆ ಪ್ರತೀ ತಿಂಗಳು 600 ರೂ. ನಂತೆ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಮಕ್ಕಳು ಪಡೆಯುವಂತಾಗಬೇಕು. ಗ್ರಾಮ ಪಂಚಾಯತ್‌ಗಳ ಅನುದಾನದಲ್ಲಿ ಶೇ. 2 ರಷ್ಟು ಮಕ್ಕಳಿಗೆ ಕ್ರೀಡಾ ಉಪಕರಣಗಳನ್ನು ಖರೀದಿಸಲು ಅವಕಾಶವಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯತೆ ಹೊಂದಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದರು.
ಮಕ್ಕಳ ಸ್ನೇಹಿ ಪಂಚಾಯತ್ ಅಭಿಯಾನದ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಪ್ರತ್ಯೇಕವಾಗಿ ಮಾಡಬೇಕು ಎಂದ ಅವರು, ದಸ್ತಾವೇಜು ನಿರ್ವಹಣೆಯಲ್ಲಿ ಉಡುಪಿ ಜಿಲ್ಲೆಯು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.
ಜಿಲ್ಲೆಯ ಪಿಯುಸಿ, ಡಿಪ್ಲೋಮಾ, ಐಟಿಐ ಸೇರಿದಂತೆ 18 ವರ್ಷಕ್ಕಿಂತ ಕಡಿಮೆ ಇರುವ ಶಿಕ್ಷಣ ಸಂಸ್ಥೆಗಳಲ್ಲಿ, ಸರ್ಕಾರಿ ಕಚೇರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ 112 ಅನ್ನು ಶಾಶ್ವತ ಫಲಕದಲ್ಲಿ ನಮೂದಿಸಲು ಸೂಕ್ತ ಕ್ರಮ ವಹಿ¸ಸುವಂತೆ ತಿಳಿಸಿದರು.
ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಮತ್ತಿತರ ಆಸ್ಪತ್ರೆಗಳಲ್ಲಿ ತಾಯಿ ಕಾರ್ಡ್ ಮತ್ತು ಹೊರರೋಗಿ ಚೀಟಿಯಲ್ಲಿ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂದು ನಮೂದಿಸಬೇಕು ಎಂದ ಅವರು, ಕುಷ್ಠರೋಗ ಪೀಡಿತ ಮಕ್ಕಳ ಪಟ್ಟಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಹೊರ ಜಿಲ್ಲೆಗಳ ಹೆಚ್ಚಿನ ಮಕ್ಕಳು ವಸತಿನಿಲಯಗಳಲ್ಲಿ ವಾಸವಿದ್ದು, ಅವರುಗಳಿಗೆ ವ್ಯವಸ್ಥಿತ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವಸತಿ ನಿಲಯದ ಮಕ್ಕಳಿಗೂ ಕ್ರೀಡಾ ಉಪಕರಣಗಳನ್ನು ಕಲ್ಪಿಸುವ ಕೆಲಸವಾಗಬೇಕು ಎಂದ ಅವರು, ವಸತಿ ನಿಲಯದ ಸಿಬ್ಬಂದಿಗಳು ವಿದ್ಯಾರ್ಥಿನಿಲಯಗಳ ಮಕ್ಕಳ ಜೊತೆಯಲ್ಲಿ ಸೌಹಾರ್ದತೆಯಿಂದ ವರ್ತಿಸಬೇಕು ಎಂದರು.
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಆದಷ್ಟು ಶೀಘ್ರವಾಗಿ ಮಾಡಬೇಕು. ಪೌರಕಾರ್ಮಿಕರ ಮಕ್ಕಳ ಸ್ಥಿತಿಗತಿಗಳ ವರದಿಯನ್ನು ನೀಡುವಂತೆ ಹಾಗೂ ಪೌರಕಾರ್ಮಿಕರ ಮಕ್ಕಳಿಗೆ ಬಾಲಕಾರ್ಮಿಕ, ಫೋಕ್ಸೊ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ವಿಕಲಚೇತನರ ಗ್ರಾಮಸಭೆಯನ್ನು ನಿರಂತರವಾಗಿ ಆಯೋಜಿಸಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ಶೇ. 5 ರ ಅನುದಾನವನ್ನು ವಿಕಲಚೇತನರಿಗೆ ಅಗತ್ಯ ಸಲಕರಣೆಯನ್ನು ಪೂರೈಸಲು ಬಳಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 1522 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 1051 ಸ್ವಂತ ಕಟ್ಟಡ, 31 ಬಾಡಿಗೆ ಕೇಂದ್ರದಲ್ಲಿ ಹಾಗೂ ಉಳಿದಂತೆ ಶಾಲೆಗಳ ಕಟ್ಟಡಗಳಲ್ಲಿ ನಡೆಯುತ್ತಿದೆ. ಸರಕಾರಿ ಉದ್ದೇಶಗಳಿಗೆ ಅಗತ್ಯವಿರುವ ನಿವೇಶನಗಳನ್ನು ಗುರುತಿಸಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು. ಬಾಡಿಗೆ ಕಟ್ಟಡ, ಸಮುದಾಯ ಭವನ, ಸರಕಾರಿ ಇಲಾಖೆಯ ಖಾಲಿ ಜಾಗಗಳಲ್ಲಿರುವ ಅಂಗನವಾಡಿಗಳಲ್ಲಿ ಸುರಕ್ಷತಾ ಕ್ರಮಗಳ ಕುರಿತು ಗಮನ ಹರಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಎಂ. ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.