ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ನಿಯಮಾನುಸಾರ ಜೀವನ ನಡೆಸಿದರೆ ಜೀವನದಲ್ಲಿ ಎಂದೂ ಸೋಲು ಬರುವುದಿಲ್ಲ. ಸ್ಕೌಟ್ ಮತ್ತು ಗೈಡ್ಸ್‌ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ನಮ್ಮಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣಗಳು ರೂಪುಗೊಳ್ಳುತ್ತದೆ. ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ವಿದ್ಯಾರ್ಥಿ ಜೀವನವನ್ನು ಇನ್ನಷ್ಟು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್ ಹೇಳಿದರು.
ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕುಂದಾಪುರ ಮತ್ತು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಕುಂದಾಪುರ ವಲಯ ಮಟ್ಟದ ಪಟಾಲಾಯಂ ನಾಯಕತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಸ್ಕೌಟ್ ಮತ್ತು ಗೈಡ್ಸ್‌ನ ಕುಂದಾಪುರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಆರ್.ನಾಯ್ಕ್ ಕುಂದಾಪುರ, ದಿನಕರ ಪಟೇಲ್ ಶುಭ ಹಾರೈಸಿದರು. ಸ.ವಿ.ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಕವಿತಾ ಎಂ.ಸಿ., ಪತ್ರಕರ್ತ ಬಿ.ರಾಘವೇಂದ್ರ ಪೈ, ಜಿಲ್ಲಾ ಸಂಘಟಕಿ ಸುಮನ್ ಶೇಖರ್, ಕಾರ್ಯದರ್ಶಿ ದೇವು ನಾಯಕ್, ಮೊದಲಾದವರು ಉಪಸ್ಥಿತರಿದ್ದರು.
ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಸ್ವಾಗತಿಸಿದರು. ಜಿಲ್ಲಾ ಸ್ಥಾನೀಯ ಆಯುಕ್ತ ಆನಂದ ಅಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಶುಭಾ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ರತ್ನಾಕರ ಶೆಟ್ಟಿ ವಂದಿಸಿದರು.