ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವೈಯಕ್ತಿಕ ಸ್ವಚ್ಛತೆಯೊಂದಿಗೆ ಪರಿಸರದ ಸ್ವಚ್ಛತೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮನೆಯಿಂದಲೇ ಸ್ವಚ್ಛತೆಯ ಪಾಠ ಆರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಾವು ಸಮಾಜದಲ್ಲಿ ಮಾಡಬಹುದಾದ ಬಹುದೊಡ್ಡ ಸೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್. ಹೇಳಿದರು.
ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ರೋಟರ್ಯಾಕ್ಟ್ ಕ್ಲಬ್ – ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಸಹಯೋಗದೊಂದಿಗೆ ಗಾಂಧಿ ಜಯಂತಿಯ ಅಂಗವಾಗಿ ಗುರುವಾರ ಇಲ್ಲಿನ ಸೋಮೇಶ್ವರ ಬೀಚ್ ತೀರದಲ್ಲಿ ಆಯೋಜಿಸಲಾದ ಕಡಲತೀರ ಸ್ವಚ್ಛತಾ ಅಭಿಯಾನ & ಕೋಸ್ಟ್ ಟು ಕೋಸ್ಟ್ 3.0 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬೈಂದೂರು ತಾಲೂಕು ಹಲವು ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು, ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಭಾಗದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಪ್ರತಿಯೊಬ್ಬರನ್ನೂ ಸ್ವಚ್ಛತೆಯ ಅರಿವು ಮೂಡಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕಿದೆ ಎಂದರು.
ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿದ್ದ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಮಾತನಾಡಿದರು. ರೋಟರಿ ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ, ಸೋಮನಾಥನ್ ಆರ್., ಡಾ. ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳುವ ಪ್ರತಿಜ್ಞೆ ಸ್ವೀಕರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವರನ್ನು ಸ್ಮರಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ ಸ್ಪರ್ಧೆಗಳನ್ನು ಆಯೋಜಿಸಿ ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬೈಂದೂರು ರೋಟರಿ ಕ್ಲಬ್ ಕಾರ್ಯದರ್ಶಿ ಸುನಿಲ್ ಹೆಚ್. ಜಿ. ಸ್ವಾಗತಿಸಿ, ವಂದಿಸಿದರು. ರೋಟರ್ಯಾಕ್ಟ್ ಕ್ಲಬ್ ಸಂಯೋಜಕ ಎಸ್. ಮಣಿಕಂಠ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.