ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು, ಸ್ವಾತಂತ್ರ್ಯಯ ಹೋರಾಟಗಾರರು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕ್ರೀಡಾಪಟುಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಂದು ಬೆಳಗ್ಗೆ 8 ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.
ರಾಜ್ಯ ಸರ್ಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನದಂದು ನಗರದ ಅಜ್ಜರಕಾಡಿನ ಭುಜಂಗ ಪಾರ್ಕ್ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದರು.
ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಕೆ.ಎಸ್ ಹೆಗ್ಡೆ, ನಗರಸಭೆ ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಡಿ.ಡಿ.ಪಿ.ಐ ಗಣಪತಿ ಕೆ, ಡಿ.ಡಿ.ಪಿ.ಯು ಮಾರುತಿ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.