ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು, ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಅವರು ಅಂದು ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನ್ಯೂಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯಾ ಅಭಿಯಾನ ಮತ್ತು ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಗು ಜನಿಸಿದ ಆರಂಭ ಹಂತದಲ್ಲಿ ಹೆಚ್ಚಿನ ಕಾಳಜಿ ಅತ್ಯವಶ್ಯಕವಾಗಿದ್ದು, ಹುಟ್ಟಿನಿಂದ ಮಕ್ಕಳಿಗೆ ನೀಡಬೇಕಾದ ಲಸಿಕೆಯ ಕುರಿತು ಯಾವುದೇ ನಿರ್ಲಕ್ಷ ತೋರದೆ ಸಮಯಕ್ಕೆ ಸರಿಯಾಗಿ ಲಸಿಕೆಯನ್ನು ನೀಡುವುದರ ಜೊತೆಗೆ ಮನೆಯ ವಾತಾವರಣ ಹಾಗೂ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸರಿಯಾದ ರೀತಿಯಲ್ಲಿ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಳ್ಳದೇ ಅನೇಕ ಬಾರಿ ಗರ್ಭಿಣಿ ಮಹಿಳೆಯರು ಹೆರಿಗೆಗೆ ಮುಂಚಿತವಾಗಿ ಸಾವನಪ್ಪುದನ್ನು ಕಾಣಬಹುದಾಗಿದ್ದು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತಪಾಸಣೆಗೆ ಬಂದ ಸಂದರ್ಭದಲ್ಲಿ ಅವರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಿ ಅವರು ನೀಡಿದ ಆರೋಗ್ಯ ಸಲಹೆಗಳನ್ನು ಪಾಲನೆ ಮಾಡಬೇಕು ಎಂದರು.
ತಾಯಿಯು ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇದ್ದಲ್ಲಿ ಮಕ್ಕಳಲ್ಲಿ ಅಪೌಷ್ಠಿಕತೆ ಕಂಡುಬರುವ ಸಾಧ್ಯತೆ ಇದ್ದು, ತಾಯಿಂದಿರ ಪೌಷ್ಠಿಕತೆ ಕುರಿತು ಗಮನ ನೀಡಿ ಮಗುವಿಗೆ ಸರಿಯಾದ ರೀತಿಯಲ್ಲಿ ಎದೆಹಾಲು ಹಾಗೂ ಆರೋಗ್ಯಯುತವಾದ ಪೌಷ್ಠಿಕ ಆಹಾರವನ್ನು ನೀಡುವುದರಿಂದ ಅಪೌಷ್ಠಿಕತೆಯನ್ನು ನಿವಾರಿಸಬಹುದಾಗಿದೆ ಎಂದರು.
ನವಜಾತ ಶಿಶುವಿನ ಆರೈಕೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ನವಜಾತ ಶಿಶು ಸಪ್ತಾಹವನ್ನು ಆಯೋಜಿಸಲಾಗಿದ್ದು, ಸಪ್ತಾಹದಲ್ಲಿ ತಾಯಂದಿರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಮಾತನಾಡಿ, ಮಕ್ಕಳಲ್ಲಿ ಪದೇ ಪದೇ ರೋಗಗಳು ಕಂಡುಬರುವ ಮುಂಚಿತವಾಗಿ ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರ ಸರ್ವಾಂಗೀಣ ಬೆಳವಣಿಗೆಗೆ ತೊಂದರೆಯಾಗದಂತೆ ಜಾಗೃತಿ ವಹಿಸಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ರೋಗಗಳು ಬರುವುದನ್ನು ತಡೆಗಟ್ಟುವ ದೃಷ್ಟಿಯಿಂದ ಪ್ರತಿಯೊಬ್ಬರು ಸ್ವಚ್ಚತೆ ಹಾಗೂ ಪೌಷ್ಠಿಕ ಆಹಾರ ಸೇವನೆ ಕುರಿತು ಜಾಗೃತಿ ವಹಿಸಬೇಕು ಎಂದರು.
ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್ ಮಾತನಾಡಿ, ಆರೋಗ್ಯ ಸಿಬ್ಬಂದಿಗಳು ನೀಡುವ ಮಾರ್ಗದರ್ಶನವನ್ನು ಸರಿಯಾದ ರೀತಿಯಲ್ಲಿ ಅನುಸರಿಸುವ ಜೊತೆಗೆ ಮಕ್ಕಳ ಬೆಳವಣಿಗೆಯಲ್ಲಿ ಪ್ರಾಮುಖ್ಯತೆಯನ್ನು ಹೊಂದಿದ ತಾಯಿಯ ಎದೆಹಾಲನ್ನು ಮಗುವಿಗೆ ಪೂರ್ಣ ಪ್ರಮಾಣದಲ್ಲಿ ನೀಡಿದಾಗ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದಾಗಿದೆ ಎಂದರು.
ಜಿಲ್ಲಾ ಎಂ.ಸಿ.ಹೆಚ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ವೇಣುಗೋಪಾಲ್ ರಾಷ್ಟ್ರೀಯ ನವಜಾತ ಶಿಶು ಜಾಗೃತಿ ಸಪ್ತಾಹದ ಕುರಿತು ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಮಹಾದೇವ ಭಟ್ ನ್ಯುಮೋನಿಯಾವನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಜಾಗೃತಿ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ನ್ಯುಮೋನಿಯಾ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮದ ಕುರಿತ ಮಾಹಿತಿಯುಳ್ಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜಗೋಪಾಲ್ ಭಂಡಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಆರೋಗ್ಯ ಇಲಾಖೆ, ಆಸ್ಪತ್ರೆಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿ ಡಾ.ಜೋತ್ಯಾನ ಬಿ.ಕೆ ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ವಂದಿಸಿದರು.