ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಕರ್ನಾಟಕ ಸರಕಾರದ ಪ್ರತಿಷ್ಠಿತ ರಾಜ್ಯಮಟ್ಟದ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ.
ನವಂಬರ್ 17 ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಗತಿಪರ ಕೃಷಿಕರಾಗಿ, ಮಾದರಿ ಹೈನುಗಾರರಾಗಿ ಸಾಧನೆ ಮಾಡಿರುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಅಗ್ರಮಾನ್ಯ ಸಾಧನೆ ಮಾಡಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಉತ್ತುಂಗಕ್ಕೇರಿಸಿದ್ದಾರೆ. ಮೆಕೋಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸ್ವಂತ ಕಟ್ಟಡ ನಿರ್ಮಾಣ, ಹಾಲು ಶೀತಲಿಕರಣ ಘಟಕ ಸ್ಥಾಪನೆಯಲ್ಲಿ ಮುಂಚೂಣಿ ವಹಿಸಿದ್ದಾರೆ.