ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು 2023-24ನೇ ಸಾಲಿನಲ್ಲಿ ಒಟ್ಟು 1.06 ಲಕ್ಷ ಲೀಟರ್ ಹಾಲು ಪೂರೈಕೆ ಮಾಡಿದ್ದಾರೆ. ಪ್ರತಿವರ್ಷ ಹಾಲು ಪೂರೈಕೆಯ ಪ್ರಮಾಣವನ್ನೂ ಹೆಚ್ಚಿಸಿದ್ದಾರೆ. ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ 2022ರಲ್ಲಿ ನೂತನ ಕಟ್ಟಡ, ಸಾಂದ್ರಶಿತಲೀಕರಣ ಘಟಕವನ್ನು ಆರಂಭಿಸುವಲ್ಲಿ ಶ್ರಮಿಸಿದ್ದಾರೆ.
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಇತ್ತೀಚಿಗಷ್ಟೇ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ ► ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ – https://kundapraa.com/?p=79132 .
ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಸಾದಕರ ಮಹಾಮಂಡಳ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಜಿ.ಕೆ.ವಿ.ಕೆಯಲ್ಲಿ ನ.26ರಂದು ನಡೆಯುವ ಪ್ರಗತಿಪರ ಹೈನುಗಾರರ ತಾಂತ್ರಿಕ ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಕೇಂದ್ರ ಹಾಗೂ ರಾಜ್ಯದ ಸಚಿವರುಗಳು, ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಪಶಸಂಗೋಪನಾ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.