ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11 ಹಾಗೂ 35-14 ನೇರ ಸೆಟ್‌ಗಳಿಂದ ಸೋಲಿಸಿ ಗೆಲುವು ಸಾಧಿಸಿತು. ಬಾಲಕಿಯರ ವಿಭಾಗದ ಫೈನಲ್ಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವು ಮಂಡ್ಯ ಜಿಲ್ಲಾ ತಂಡವನ್ನು 35-14 ಹಾಗ 35-11 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ತಂಡದಲ್ಲಿ ಪ್ರಮುಖ ಆಟಗಾರರಾಗಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 5 ಬಾಲಕರು ಹಾಗೂ 5 ಬಾಲಕಿಯರು ಪ್ರತಿನಿಧಿಸಿದ್ದು ಗೆಲುವಿಗೆ ಸಹಕಾರಿಯಾಯಿತು.
ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ತಂಡ, ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸತತ 17ನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಹಿರಿಮೆಗೆ ಪಾತ್ರವಾಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.