ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಸಾಫ್ಟ್ ಬಾಲ್ ಪಂದ್ಯಾಟದ ಉದ್ಘಾಟನೆ ನಡೆಯಿತು.
ಕಾಲೇಜಿನ ಗೌರ್ನಿಂಗ್ ಕೌನ್ಸಿಲ್ ಸದಸ್ಯ, ಯುವ ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡರೆ, ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ. ಪಠ್ಯ ಚಟುವಟಿಕೆಗಳೊಂದಿಗೆ ಸಹಪಠ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ಇದೇ ಸಂದರ್ಭ ಕಾಲೇಜಿನ ಕ್ರೀಡಾ ಸಾಧನೆಯನ್ನು ಪ್ರಶಂಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ| ಜರಾಲ್ಡ್ ಸಂತೋಷ್ ಡಿಸೋಜ, ಸಹಾಯಕ ನಿರ್ದೇಶಕರಾದ ಡಾ. ಪ್ರಸನ್ನ, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಶೆಟ್ಟಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.