ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಕ್ಕಳಲ್ಲಿ ಮೂಡುವ ಆಲೋಚನೆಗಳು, ಚಿಂತನೆಗಳನ್ನು ಸರಿಯಾಗಿ ಬಳಸಿಕೊಂಡು ಅವುಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಅಟಲ್ ಟಿಂಕರಿಂಗ್ ಲ್ಯಾಬ್ ಒಂದು ವೇದಿಕೆಯಾಗಲಿದೆ ಎಂದು ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು.
ಅವರು ಇಲ್ಲಿನ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಸಹಕಾರದೊಂದಿಗೆ ಎಸ್.ವಿ. ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಆಯೋಜಿಸಲಾಗಿರುವ ಐದು ದಿನಗಳ ಅಟಲ್ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಹೊಸ ಹೊಸ ಅನ್ವೇಷಣೆ ನಡೆಸಲು ವಿದ್ಯಾರ್ಥಿಗಳಿಗೆ ಅಟಲ್ ಟಿಂಕರಿಂಗ್ ಲ್ಯಾಬ್ ಸಹಕಾರಿಯಾಗುತ್ತಿದ್ದು, ಇದರ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಬಹುದು. ಅಟಲ್ ಬೇಸಿಗೆ ಶಿಬಿರದ ಸದುಪಯೋಗವನ್ನು ಮಕ್ಕಳು ಪಡೆದುಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡುವಂತಾಗಬೇಕು ಎಂದರು.
ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕಿ ಜಯಶ್ರೀ ನಾಯಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.















