ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯು ಸೋಮವಾರ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಳಾವರ ವರದಾರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇದರ ಗ್ರಂಥಪಾಲಕರಾದ ರವಿಚಂದ್ರ ಹೆಚ್. ಎನ್. ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದು, ಅರ್ಥ ಮಾಡಿಕೊಳ್ಳುವುದರಿಂದ ಅವರ ಆಲೋಚನೆ ವಿಸ್ತರಿಸುವುದಲ್ಲದೇ ಜೀವನದ ಮೌಲ್ಯ ಮತ್ತು ಸಾರ್ಥಕತೆಯನ್ನು ತಿಳಿಸಿಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಭಳಕೆಯಿಂದ ಸ್ವಯಂ ವ್ಯಕ್ತಿತ್ವ ವಿಕಾಸ ಮತ್ತು ಶೈಕ್ಷಣಿಕ ಪ್ರಕ್ರಿಯೆಗಳ ಉತ್ತಮ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಘಟಕ ಸಂಯೋಜಕರಾದ ಸಂದೀಪ ಕೆ., ಉಪಸ್ಥಿತರಿದ್ದರು.
ಅಂತಿಮ ಬಿ.ಎ. ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಗ್ರಂಥಪಾಲಕರಾದ ಮುರುಳಿಧರ ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿನಿ ಸೌಮ್ಯ ವಂದಿಸಿದರು.










