ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇಲ್ಲಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಯಂತ್ರಗಳ ಟ್ರಯಲ್ ರನ್ ನಡೆಯಿತು.

ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಪೂಜಾ ವಿಧಿ ವಿಧಾನ ನೆರವೇರಿಸಿ ಡಯಾಲಿಸಿಸ್ ಯಂತ್ರಗಳ ಪರೀಕ್ಷಾರ್ಥ ಪ್ರಯೋಗಕ್ಕೆ ಚಾಲನೆ ನೀಡಿ ಮಾತನಾಡಿ, ಬೈಂದೂರಿನ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೊಂದ ಬಡ ಜನರ ಬೇಡಿಕೆಯಂತೆ ಬೈಂದೂರಿನ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿ ದೇವತಾನುಗೃಹ ವನ್ನು ಕೋರಿದ್ದೇವೆ.

ಬೈಂದೂರಿನ ಆರೋಗ್ಯ ಕ್ಷೇತ್ರದಲ್ಲಿ ಹಲವು ಕನಸುಗಳನ್ನು ಕಟ್ಟಿ ಕೊಂಡಿದ್ದೇವೆ ಹಾಗೂ ಅದಕ್ಕಾಗಿ ಪೂರಕ ವಾತಾವರಣ ನಿರ್ಮಾಣಕ್ಕಾಗಿ ಪ್ರಯತ್ನಿಸಲಾಗುತ್ತಿದೆ. ಈ ಹಿಂದೆ ಮಣಿಪಾಲ ಆಸ್ಪತ್ರೆಯ ನೆರವಿನೊಂದಿಗೆ ಪಿ.ಪಿ.ಪಿ ಮಾದರಿಯಲ್ಲಿ ಡಯಾಲಿಸಿಸ್ ಸೇವೆ ಒದಗಿಸಲು ಪ್ರಯತ್ನ ಆಗಿತ್ತಾದರೂ ಸರಕಾರ ಅದಕ್ಕೆ ಅನುಮತಿಯನ್ನು ನೀಡದ ಕಾರಣ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ಮಣಿಪಾಲ ಆಸ್ಪತ್ರೆಯ ಸಹಯೋಗದಲ್ಲಿ ಡಯಾಲಿಸಿಸ್ ಸೇವೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇದೀಗ ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಕಾರ್ಯರಂಭಕ್ಕೆ ಎದುರಾಗಿದ್ದ ನೀರಿನ ಸಮಸ್ಯೆಯನ್ನು ನಿವಾರಿಸಿ ಕೊಂಡು ಉಚಿತ ಡಯಾಲಿಸಿಸ್ ಸೇವೆ ಆರಂಭ ಗೊಂಡಿರುವುದರಿಂದ ಬೈಂದೂರಿನ ನೊಂದ ಬಡ ಜನರಿಗೆ ಅನುಕೂಲವಾಗಲಿದೆ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್, ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗ ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










