ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಸಾಲಿಗ್ರಾಮದ ಚಿತ್ರಪಾಡಿ ಬೆಲ್ಲದ ಗಣಪತಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಬ್ಯಾಂಕ್ ಅಧಿಕಾರಿ ಚಿತ್ರಪಾಡಿಯ ಕೆ.ರಮೇಶ ರಾವ್ (73) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೇ 13ರಂದು ರಸ್ತೆ ಬದಿಯಲ್ಲಿ ನಿಂತಿದ್ದ ಇವರಿಗೆ ಅಂಬ್ಯುಲೆನ್ಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡು ಕೋಮಾಸ್ಥಿತಿಯಲ್ಲಿದ್ದ ಇವರು, ಸೆ.08ರ ಸಂಜೆ ವೇಳೆ ಮನೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಂಡಿಕೇಟ್ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ನಿವೃತ್ತರಾಗಿದ್ದ ಇವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.
ಉಡುಪಿಯ ರಥಬೀದಿ ಗೆಳೆಯರು ಸಂಘಟನೆಯಲ್ಲಿ ಸ್ಥಾಪಕ ಕೋಶಾಧಿಕಾರಿಯಾಗಿ ಸೇವೆಸಲ್ಲಿಸಿದ್ದ ಇವರು, ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು. ಇವರು ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗೌರವಿಸಿ ಯಕ್ಷಗಾನ ಕಲಾರಂಗ ಅವರಿಗೆ 2019ರಲ್ಲಿ ಯಕ್ಷಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇವರ ನಿಧನಕ್ಕೆ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.















