ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಜೀವನದಲ್ಲಿ ಶಾಶ್ವತವಲ್ಲ, ಮುಂದಿನ ಜೀವನದಲ್ಲಿ ಯಶಸ್ಸು ಪಡೆಯಬೇಕೆಂದರೆ ಸೋಲು ಅನಿವಾರ್ಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಗುರುವಾರದಂದು ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ತಮ್ಮದಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಧೀಮಂತ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದನು. ಶ್ರದ್ಧಾ, ವಿದ್ಯಾ, ಉನ್ನತಿ ಹಾಗೂ ಪ್ರಜ್ಞಾ ವಿದ್ಯಾರ್ಥಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ವಿದ್ಯಾರ್ಥಿನಿಯರಾದ ಚೈತ್ರಾ ಅತಿಥಿಯನ್ನು ಪರಿಚಯಿಸಿ, ಆಕಾಂಕ್ಷಾ ಎಸ್. ಪೈ ಸ್ವಾಗತಿಸಿ, ಅನೌಷ್ಕಾ ಕಾರ್ಯಕ್ರಮ ನಿರೂಪಿಸಿ, ಶ್ರೀರಕ್ಷಾ ಶೆಣೈ ವಂದಿಸಿದರು.















