ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಕೈಗೊಂಡಿದ್ದು, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್‌ನಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಟಪಾಡಿ ಜಂಕ್ಷನ್‌ನಲ್ಲಿ ಓವರ್ ಪಾಸ್ ಕಾಮಗಾರಿಯನ್ನು ಈಗಾಗಲೇ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ರಸ್ತೆಗಳ ಮೂಲಕ ಸಂಚರಿಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅದರನ್ವಯ ವಾಹನಗಳು ಸಂಚರಿಸುತ್ತಿದ್ದು, ಇದರಿಂದಾಗಿ ಗ್ರಾಮೀಣ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ವಾಹನಗಳ ಸಂಚಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೆಲವು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರುಗಳಿಂದ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಪರಿಶೀಲನೆ ಮಾಡಿ, ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕು ಎಂದರು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು, ಟ್ರಕ್‌ಗಳು, ಮೂಡುಬೆಳ್ಳೆ-ದೆಂದೂರುಕಟ್ಟೆ, ಅಲೆವೂರು ಮಾರ್ಗವಾಗಿ ಉಡುಪಿಗೆ ಸಂಚರಿಸುತ್ತಿವೆ. ಈ ರಸ್ತೆಗಳು ಕಿರಿದಾಗಿದ್ದು, ಕೆಲವು ಮೇಲ್ಸೇತುವೆಗಳು ಶಿಥಿಲಗೊಂಡಿವೆ ಎಂದು ದೂರುಗಳಿದ್ದು, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯವರು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಸೇತುವೆ ಸಾಮರ್ಥ್ಯವನ್ನು ಹೆಚ್ಚಿಸುವ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮಾಜಿ ಸಚಿವರು ಹಾಗೂ ಮುಖಂಡರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಹಿನ್ನೆಲೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸುವ ಮುನ್ನ ಸ್ಥಳೀಯ ಏಳು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ವಿಶ್ವಾಸ ಪಡೆಯುವುದರೊಂದಿಗೆ ಕೈಗೊಳ್ಳಬೇಕಿತ್ತು. ಕೆಲವು ರಸ್ತೆಗಳು ಕಿರಿದಾಗಿದ್ದು, ಭಾರೀ ಒಂದು ವಾಹನ ಸಂಚರಿಸಲು ಅವಕಾಶವಿದೆ. ಎದುರಿನಿಂದ ಸಣ್ಣ ವಾಹನಗಳು ಬಂದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಕೆಲವು ಜಾಗಗಳಲ್ಲಿ ರಸ್ತೆ ಅಗಲೀಕರಣ ಅಗತ್ಯವಿದೆ ಹಾಗೂ ದುರ್ಬಲವಿರುವ ಸೇತುವೆಗಳ ದುರಸ್ಥಿ ಹಾಗೂ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವರೊಂದಿಗೆ ಚರ್ಚಿಸಿ, ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಮಾಡಲಾಗುವುದು ಎಂದರು.
ಸ್ಥಳೀಯ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಬದಲಿ ಮಾರ್ಗ ವಾಹನಗಳ ಸಂಚಾರದಿಂದ ಗ್ರಾಮೀಣ ಭಾಗದ ಜನರುಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಹಾಲಿ ಕಾಮಗಾರಿ ಕೈಗೊಳ್ಳುತ್ತಿರುವ ರಸ್ತೆಯ ಆಜು-ಬಾಜಿನಲ್ಲಿ ಬದಲಿ ಮಾರ್ಗ ಕಲ್ಪಿಸಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.















