ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ (66) ಸೋಮವಾರ ಅಲ್ಪಕಾಲದ ನಿಧನರಾಗಿದ್ದಾರೆ.
ರಾಜಕೀಯ ಬದುಕಿನ ಆರಂಭದಲ್ಲಿ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಅವರು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಕಾಂಗ್ರೆಸ್ ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಿ ತ್ರಿಸ್ತರ ಆಡಳಿತವನ್ನು ಪ್ರತಿನಿಧಿಸಿದ್ದರು. 1987ರಲ್ಲಿ ತ್ರಾಸಿ ಪಂಚಾಯತ್ ನಲ್ಲಿ ಪ್ರಪ್ರಥಮ ಅಧ್ಯಕ್ಷರಾಗಿದ್ದವರು. 2007ರಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಂದೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪಂಚಗಂಗಾವಳಿ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿ, ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಗುಜ್ಜಾಡಿಯ ಭಾಸ್ಕರ ಪೈ ಸ್ಮಾರಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದ ಅವರು, ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು. ದೇವಾಡಿಗ ಸಮಾಜದ ತ್ರಾಸಿ ವಲಯ ಅಧ್ಯಕ್ಷರಾಗಿದ್ದ ಅವರು, ದೇವಾಡಿಗ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.










