ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 01 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.
ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡಲು ಹಾಗೂ ದಾರ್ಶನಿಕರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಜಯಂತಿ ಕಾರ್ಯಕ್ರಮಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾಡಳಿತ ಹಾಗೂ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಇವರ ಸಹಯೋಗದಲ್ಲಿ ಮೇ.01ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉಡುಪಿಯ ಬೋರ್ಡ್ ಹೈಸ್ಕೂಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಆಚರಿಸಲಾಗುವುದು ಎಂದ ಅವರು, ಕಾರ್ಯಕ್ರಮದ ಯಶಸ್ಸಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಗಣ್ಯರನ್ನು, ಜನಪ್ರತಿನಿಧಿಗಳನ್ನು ಹಾಗೂ ಸಮುದಾಯದವರನ್ನು ಆಹ್ವಾನಿಸಬೇಕು. ಶಾಂತಿ, ಅಹಿಂಸೆ ಹಾಗೂ ಮಾನವೀಯತೆಯ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಚಿಂತನೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸವನ್ನು ಏರ್ಪಡಿಸಬೆಕು ಎಂದ ಅವರು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ವ್ಯಾಪಕ ಪ್ರಚಾರ ನೀಡುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಇದರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು.
















