ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಮಂಗಳವಾರ ನಡೆಯಿತು.
ಪ್ರಾಥಮಿಕ ಅರೋಗ್ಯ ಕೇಂದ್ರ ಕೆದೂರು ಇಲ್ಲಿನ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಅವರು ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳ ಕುರಿತು ವಿವರಿಸಿ, ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೇಗೆ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಆರೋಗ್ಯವೇ ಭಾಗ್ಯ ಎಂಬುದನ್ನು ಎಲ್ಲರೂ ಅರಿತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಾನಿಗಳಾದ ಆನಂದ್ ಸಿ. ಕುಂದರ್ ಗೀತಾನಂದ ಫೌಂಡೇಶನ್ ಮಣೂರು, ಪಡುಕೆರೆ ಅವರು ನೀಡಿದ ಉಚಿತ ನೋಟ್ ಬುಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಆರೋಗ್ಯ ಸಹಾಯಕಿ ಶಾಂತಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ದೀಪಾವತಿ ವಂದಿಸಿದರು.

















