ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಿತು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕ ಪಠಣ, ಭಾಷಣ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ವೇದಿಕೆಯ ಭಯವನ್ನು ನಿವಾರಿಸಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಯಿತು. ವಿದ್ಯಾರ್ಥಿಗಳು ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಹೇಮಮಾಲಿನಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ವಿದ್ಯಾರ್ಥಿಗಳಾದಅದ್ವೈತ್, ಸಾತ್ವಿಕ್ ಹಾಗೂ ಚಿನ್ಮಯಿ ಅವರು ಯಶಸ್ವಿಯಾಗಿ ನಿರ್ವಹಿಸಿದರು.

















