ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಈ ಕುರಿತು ಸೂಚನೆ ನೀಡಲಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ವಹಿಸಿರುವ ಬಗ್ಗೆ ಮಾಹಿತಿ ಪಡೆದುಕೊಂಡು, ಮುಂದಿನ ಕ್ರಮ ವಹಿಸಲಾಗುವುದೆಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಅವರು ರವಿವಾರ ಪತ್ನಿ ಕನ್ನಿಕಾ ಪರಮೇಶ್ವರಿ ಅವರೊಂದಿಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಚಂಡಿಕಾ ಹೋಮ ನೆರವೇರಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲ್ಲೂರು ದೇವಸ್ಥಾನಕ್ಕೆ ದೇಶ-ವಿದೇಶಗಳಿಂದ ಬರುವ ಭಕ್ತರಿಗೆ ದರ್ಶನ, ವಸತಿ, ಪಾರ್ಕಿಂಗ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಶೀಘ್ರದಲ್ಲಿ ಅದನ್ನು ಕಾರ್ಯಗತ ಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ದೇವಾಲಯದ ಹಿರಿಯ ಅರ್ಚಕರಾದ ಎನ್. ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ನೇತೃತ್ವದಲ್ಲಿ ಚಂಡಿಕಾ ಹೋಮ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು.
ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ತಂತ್ರಿ ರಾಮಚಂದ್ರ ಅಡಿಗ, ಅರ್ಚಕ ಸುರೇಶ್ ಭಟ್, ಶ್ರೀಶ ಭಟ್ ಹಾಜರಿದ್ದರು.
ಡಿಸಿಎಂ ಪರಿಶೀಲನೆ:
ದೇವಸ್ಥಾನದ ಉಗ್ರಾಣ, ಊಟೋಪಚಾರ ಕೊಠಡಿ, ಲಲಿತಾಂಬಿಕಾ ವಸತಿ ಗ್ರಹ ಸೇರಿದಂತೆ ದೇವಸ್ಥಾನದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಖುದ್ದು ಉಪಮುಖ್ಯಮಂತ್ರಿ ಪರಿಶೀಲನೆ ನಡೆಸಿದರು. ಈ ಸಂಬಂಧ ಸುಧಾರಿತ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತ ಶರತ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಪ ವಿಭಾಗಾಧಿಕಾರಿ ರಶ್ಮೀ ಎಸ್.ಆರ್. ಹೆಚ್ಚುವರಿ ಎಸ್‌ಪಿ ಸುಧಾಕರ ನಾಯ್ಕ, ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿ ಕಾರಿ ಮುತ್ತುರಾಜ್ ತುಂಬಿಗೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಭಿಲಾಷ್ ಪಿ.ವಿ., ರಾಜೇಶ್ ಕಾರಂತ್, ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ ಸುಧಾ ಕೆ., ಧನಾಕ್ಷಿ ಪೂಜಾರಿ, ಮಹಾಲಿಂಗ ನಾಯ್ಕ ಕಾಂಗ್ರೆಸ್ ಪಕ್ಷದ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ರೈ ಉಡುಪಿ, ರಾಜು ಎಸ್ ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

















