ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡ್ಡರ್ಸೆ ಗ್ರಾಮ ಪಂಚಾಯತ್ ಜನಸಂಪರ್ಕ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಇತ್ತೀಚಿಗೆ ಜರಗಿತು.
ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಜನಸಂಪರ್ಕ ಸಭೆಯ ಮುಖ್ಯ ಉದ್ದೇಶವೇ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡುವುದು. ಸರ್ಕಾರದ ಯೋಜನೆಗಳ ಲಾಭ ಕೊನೆಯ ವ್ಯಕ್ತಿಗೂ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ತದನಂತರ ಶಾಸಕರು ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಗ್ರಾಮದ ಮೂಲಸೌಕರ್ಯ, ರಸ್ತೆ, ಕುಡಿಯುವ ನೀರು, ವಸತಿ ಯೋಜನೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರ ಗಮನ ಸೆಳೆದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ, ಬ್ರಹ್ಮಾವರ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ರಾಮದಾಸ್, ವಡ್ಡರ್ಸೆ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಸುರೇಶ್ ಬಂಗೇರ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ.ಕೆ. ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜನ ಸಂಪರ್ಕ ಕಾರ್ಯಕ್ರಮವನ್ನು ವಡ್ಡರ್ಸೆ ಗ್ರಾಮ ಪಂಚಾಯತ್ ಪಿಡಿಒ ಜಯರಾಮ್ ಶೆಟ್ಟೆ ಸ್ವಾಗತಿಸಿ, ನಿರ್ವಹಿಸಿದರು.
















