ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಸುಮಾರು 1300ಕೋಟಿ ರೂ. ಅನುದಾನ ಬಂದಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ಬಂದ ಕ್ಷೇತ್ರಗಳ ಪೈಕಿ ಬೈಂದೂರು ಕೂಡ ಒಂದಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರಕಾರ ಸಮಾಜದ ಕಟ್ಟಕಡೆಯ ಮತ್ತು ಸಾಮಾನ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಬೈಂದೂರು ಬಿಜೆಪಿ ಭದ್ರಕೋಟೆ ಎಂಬುದು ಕಳೆದ ಪಂಚಾಯತ್ ಚುನಾವಣೆಯಲ್ಲಿ ಸಾಬೀತಾಗಿದೆ. ಮುಂಬರು ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಜಿಪಂ., ತಾಪಂ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.
ಬಿಜೆಪಿ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಜರಗಿದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ಬೂತ್ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಇಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೇಳಿಕೊಳ್ಳುವ ಯಾವುದೇ ಸಾಧನೆ ಇಲ್ಲ. ಹೀಗಾಗಿ ನಿರಂತರ ಅಪಪ್ರಚಾರ ನಡೆಸಿ ಜನರಲ್ಲಿ ಗೊಂದಲ, ತಪ್ಪು ಭಾವನೆ ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಕುತಂತ್ರದಿಂದ ಚುನಾವಣೆ ಎದುರಿಸಲು ಕಾಂಗ್ರೆಸ್ ಮುಂದಾಗುವ ಸಾಧ್ಯತೆ ಇದ್ದು, ಬಿಜೆಪಿ ಕಾರ್ಯಕರ್ತರು ಇದಕ್ಕೆ ತಕ್ಕ ಉತ್ತರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ನಡೆಯಬೇಕು ಎಂದು ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು ಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ಬೂತ್ ಅಧ್ಯಕ್ಷರ ಜವಾಬ್ದಾರಿ ಬಗ್ಗೆ ಮಾತನಾಡಿದರು. ಜಿಪಂ ಸದಸ್ಯ ಬಾಬು ಶೆಟ್ಟಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಾಲಚಂದ್ರ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಮಾಲತಿ ನಾಯ್ಕ್, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.