ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಜಲಜೀವನ್ ಮಿಷನ್ ಯೋಜನೆಯಡಿ 396 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಮನೆ-ಮನೆಗೂ ಶುದ್ದ ಕುಡಿಯುವ ನೀರು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಇದರಿಂದಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ಆರ್‌ಐಡಿಎಫ್ ಅಡಿಯಲ್ಲಿ ನಬಾರ್ಡ್ ಸಾಲದ ನೆರವಿನಿಂದ ಬೈಂದೂರು ವಿಧಾನಸಭಾ ಕ್ಷೇತ್ರದ 788 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು, ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ದೊರೆಯಲಿದೆ. ಟೆಂಡರ್ ಪ್ರಕ್ರಿಯೆಯ ಬಳಿಕ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದಿರುವ ಅವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೂ ಹಾಗೂ ಯೋಜನೆ ರೂಪಿಸಲು ಸಹಕರಿಸಿದ್ದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.