ಪರಿಶಿಷ್ಟ ಜಾತಿ ಮನೆ ನಿರ್ಮಾಣಕ್ಕೆ ಅನುದಾನ ಹೆಚ್ಚಳ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಮಾಜ ಕಲ್ಯಾಣ ಇಲಾಖೆ ಅನಾವಶ್ಯಕ ಖರ್ಚಿಗೆ ಕಡಿವಾಣ ಹಾಕಿ ಮೂಲಭೂತ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಪರಿಶಿಷ್ಟ ಜಾತಿಯ ಕುಟುಂಬದ ಮನೆ ನಿರ್ಮಾಣಕ್ಕೆ ಇದ್ದ ಅನುದಾನವನ್ನು 5 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಇದ್ದ 1.70 ಲಕ್ಷ ಅನುದಾನದಲ್ಲಿ ಉತ್ತಮ ಮನೆ ನಿರ್ಮಾಣ ಸಾಧ್ಯವಿಲ್ಲ ಎನ್ನುವ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳವಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಪರಿಶಿಷ್ಟ ಕುಟುಂಬಗಳಿದ್ದು, ಸರ್ವೇ ನಡೆಸಿ ಮನೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವರ್ಷ ಅನಗತ್ಯ ವೆಚ್ಚಕ್ಕೆ ಕಡಿವಾಣ, ಅನಿವಾರ್ಯ ಅಲ್ಲದ ಯೋಜನೆ ತಡೆ ಹಿಡಿಯಲಾಗುವುದು. ಪರಿಶಿಷ್ಟ ಸಮಾಜ ಮುಖ್ಯವಾಹಿನಿಗೆ ತರಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯನಾಗಿದ್ದ ನನಗೆ ಸಮಾಜ ಕಲ್ಯಾಣ ಇಲಾಖೆಯ ದೊಡ್ಡ ಜವಾಬ್ದಾರಿ ನೀಡುವುದು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ. ನನ್ನ ಮೇಲೆ ಪಕ್ಷದ ನಾಯಕರು ಇಟ್ಟಿರುವ ಭರವಸೆಗೆ ಹುಸಿಯಾಗದ ರೀತಿಯಲ್ಲಿ ಕರ್ತವ್ಯ ನಿಭಾಯಿಸುವ ಮೂಲಕ ಸಾಮಾಜಿಕ ನ್ಯಾಯ ಕೊಡಿಸುವ ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದರು.

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಉಪಾಧ್ಯಕ್ಷ ಸಂದೀಪ ಖಾರ್ವಿ, ನಗರ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಬಿ, ದಕ ಬಿಜೆಪಿ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಸದಾನಂದ ಉಪ್ಪಿನಕುದ್ರು, ಮೀನುಗಾರಿಕಾ ಪ್ರಕೋಷ್ಠ ಜಿಲ್ಲಾಧ್ಯಕ್ಷ ಸದಾನಂದ ಬಳ್ಕೂರು, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಂಜೆ, ಒಬಿಸಿ ಪ್ರಧಾನ ಕಾರ‍್ಯದರ್ಶಿ ವಿಠಲ ಪೂಜಾರಿ ಇದ್ದರು.

ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಉಪಾಧ್ಯಕ್ಷ ಸಂದೀಪ ಖಾರ್ವಿ, ನಾಮ ನಿರ್ದೇಶಕ ಸದಸ್ಯೆ ಪುಷ್ಪಾ ಶೇಟ್, ಮಾಜಿ ಜಿಪಂ ಸದಸ್ಯ ಶ್ರೀಲತಾ ಸುರೇಶ್ ಶೆಟ್ಟಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಭಿನಂದಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ‍್ಯದರ್ಶಿ ಸುರೇಶ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

5 × 4 =