ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನಿಂದ ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಭಾಗದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ನೌಕರರು ಹಾಗೂ ಪೌರಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳು, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು.

ಭಾನುವಾರು ಬೈಂದೂರು ರೋಟರಿ ಕ್ಲಬ್’ನಲ್ಲಿ ಕಿಟ್ ವಿತರಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸುತ್ತಿರುವುದು ಬಹುದೊಡ್ಡ ಕಾರ್ಯ. ಟ್ರಸ್ಟ್ ಮೂಲಕ ಮನೆ ನಿರ್ಮಾಣ, ಆರ್ಥಿಕ ಸಹಕಾರವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯವಾದುದು. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಕೋವಿಡ್ ನಿಯಂತ್ರಣದಲ್ಲಿ ಶ್ರಮಿಸುತ್ತಿದ್ದಾರೆ.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದ್ದು ಇಂದಿನಿಂದ ಕೆಲವು ದಿನಗಳ ಕಾಲ ಪ್ರತಿ ಗ್ರಾಮದಲ್ಲಿಯೂ ದಿನಸಿ ಕಿಟ್ ವಿತರಿಸಲಿದ್ದೇವೆ ಎಂದರು.

100ಕ್ಕೂ ಅಧಿಕ ಕಿಟ್ ವಿತರಿಸಲಾಯಿತು. ಈ ಸಂದರ್ಭ ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಬೈಂದೂರು ಎಸ್ಐ ಸಂಗೀತಾ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಗುರುರಾಜ ಪಂಜು ಪೂಜಾರಿ, ಗಿರೀಶ್ ಬೈಂದೂರು ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

three × 5 =